ಚನ್ನಪಟ್ಟಣಕ್ಕೆ ಟಿಕೆಟ್ ಯಾರಿಗೆ? ಯೋಗೇಶ್ವರ್‌ಗೋ, ನಿಖಿಲ್‌ಗೋ? ಇನ್ನೊಂದು ವಾರದಲ್ಲಿ ಫೈನಲ್ ಎಂದ ಹೆಚ್‌ಡಿಕೆ

ಪರಿವರ್ತನ್ ಪ್ರಭ:

ಚನ್ನಪಟ್ಟಣ ವಿಧಾಸನಸಭಾ ಕ್ಷೇತ್ರದ ಉಪಚುನಾವಣೆಯು ಡಿಕೆ ಶಿವಕುಮಾರ್ ಹಾಗೂ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ತೀವ್ರ ಪ್ರತಿಷ್ಠೆಯ ವಿಷಯವಾಗಿದೆ. ಮತ್ತೊಂದೆಡೆ ಸಿಪಿ ಯೋಗೇಶ್ವರ್ ಕೂಡ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತುದಿಗಾಲ ಮೇಲೆ ನಿಂತಿದ್ದಾರೆ.

ಇತ್ತ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕೆ ಇಳಿಸಬೇಕು ಎಂದು ಸಿದ್ದತೆ ನಡೆಸಿದ್ದಾರೆ. ಇದರ ನಡುವೆ ಇದೀಗ ಕುಮಾರಸ್ವಾಮಿ ಅವರು, ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಸ್ಪಷ್ಟಣೆ ನೀಡಿದ್ದಾರೆ.

ಬಿಡದಿಯ ಕೇತಿಗಾನಹಳ್ಳಿಯ ತೋಟದ ಮನೆಯಲ್ಲಿ ಚನ್ನಪಟ್ಟಣ ಭಾಗದ ಮುಖಂಡರು, ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಚೆನ್ನಪಟ್ಟಣ ಉಪಚುನಾವಣೆಗೆ ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಲ್ಲಿ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಕೂಡ ನಡೆಯಲಿದೆ. ಇನ್ನೂ ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಲಿದೆ ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ಎರಡು ಬಾರಿ ಜೆಡಿಎಸ್ ಗೆದ್ದಿದೆ. ಈ ಹಿನ್ನಲೆಯಲ್ಲಿ ದೆಹಲಿ ಮತ್ತು ರಾಜ್ಯ ಬಿಜೆಪಿ ನಾಯಕರ ಜೊತೆ ಮಾತನಾಡಿ ಜೆಡಿಎಸ್‌ಗೆ ಟಿಕೆಟ್ ಬಿಟ್ಟು ಕೊಡಲು ಮನವಿ ಮಾಡಿದ್ದಾರೆ. ಬಿಜೆಪಿ ನಾಯಕರ ಸಹಮತದೊಂದಿಗೆ ಅವರ ಅಭಿಪ್ರಾಯ ಪಡೆದು ತೀರ್ಮಾನ ಮಾಡೋಣ ಎಂದು ಹೇಳಿದ್ದೇನೆ. ಎಲ್ಲರು ಒಟ್ಟಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದೇನೆ ಎಂದರು.

<strong>ನಿಖಿಲ್ ಅಭ್ಯರ್ಥಿಯಾಗಬೇಕು ಎಂಬ ಒತ್ತಾಯ</strong>

ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು ಎಂಬ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಎಂದು 95% ನಾಯಕರು, ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ನಾವು ಈಗ ಇರುವ ಸನ್ನಿವೇಶ ನೋಡಬೇಕು. ಏನೇನು ಬೆಳವಣಿಗೆಗಳು ಇವೆ ಎಂದು ನೋಡಬೇಕು.

<strong>ಮಂಡ್ಯದಲ್ಲಿ ಎಲ್ಲರೂ ಸೇರಿ ನಿಖಿಲ್‌ನನ್ನು ಸೋಲಿಸಿದರು</strong>

ನಿಖಿಲ್ ಮಂಡ್ಯದಲ್ಲಿ ನಿಲ್ಲಿಸಿದಾಗ ಎಲ್ಲಾ ಪಕ್ಷಗಳು ಒಂದಾಗಿ ಸೋಲಿಸಿದರು. ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲಾ ಒಂದಾಗಿದ್ದರು. ಅವೆಲ್ಲಾ ನೋಡಿದ್ದೇವೆ. ಚನ್ನಪಟ್ಟಣದಲ್ಲಿ ನನಗೆ ಎನ್‌ಡಿಎ ಅಭ್ಯರ್ಥಿ ಗೆಲ್ಲಲೇಬೇಕು. ನಿಖಿಲ್ ಅಥವಾ ಬೇರೆ ಅವರು ಅಭ್ಯರ್ಥಿ ಅನ್ನೋದಕ್ಕಿಂತ ಹೆಚ್ಚಾಗಿ ಎನ್‌ಡಿಎ ಅಭ್ಯರ್ಥಿ ಗೆಲುವು ಕಾಣಬೇಕು. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದು ಹೇಳಿದ್ದಾರೆ.

<strong>ಚನ್ನಪಟ್ಟಣದಲ್ಲಿ ಡಿಕೆಶಿ ಪದೇ ಪದೇ ಪ್ರವಾಸ ಮಾಡಿದ್ರೂ ಏನೂ ಪ್ರಯೋಜನವಿಲ್ಲ</strong>

ಪದೇ ಪದೇ ಚನ್ನಪಟ್ಟಣಕ್ಕೆ ಡಿಕೆ ಶಿವಕುಮಾರ್ ಪ್ರವಾಸ ಮಾಡುತ್ತಿದ್ದರೂ ಏನು ಆಗಲ್ಲ. ಡಿಕೆ ಶಿವಕುಮಾರ್ ಎಷ್ಟು ಬಾರಿ ಚನ್ನಪಟ್ಟಣಕ್ಕೆ ಭೇಟಿ ಮಾಡಿದರೂ ಅವರಿಗೇನು ಇಲ್ಲಿ ಫಲ ಸಿಗಲ್ಲ. ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಟಿಕೆಟ್ ಫೈನಲ್ ಆಗುತ್ತದೆ. ಚುನಾವಣೆ ದಿನಾಂಕ 4-5 ದಿನಗಳಲ್ಲಿ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಕೂಡಲೇ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ಜೊತೆ ಚರ್ಚೆ ಮಾಡಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *