ಪರಿವರ್ತನ್ ಪ್ರಭ:
ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗುತ್ತಿದೆ. ಒಂದು ಕಡೆ ಧಾರಾಕಾರ ಮಳೆಯಾದರೆ, ಮತ್ತೊಂದು ಕಡೆ ಬಿಬಿಎಂಪಿಯ ನಿರ್ಲಕ್ಷ್ಯದಿಂದಲೂ ಬೆಂಗಳೂರಿನ ಕೆಲವು ಭಾಗದಲ್ಲಿ ಮಳೆಯಿಂದ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ನಗರದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ ನಗರದ ಹಲವು ರಸ್ತೆಗಳು ಕೆರೆಯಂತೆ ಬದಲಾಗಿವೆ.
ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಜನ ಪರದಾಡುತ್ತಿದ್ದರೆ. ರಾಜಕೀಯ ನಾಯಕರ ನಡುವೆ ವಾಕ್ಸಮರ ಶುರುವಾಗಿದೆ. ಬೆಂಗಳೂರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಳು ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಕಿಡಿಕಾರಿವೆ. ಬೆಂಗಳೂರು ಮಳೆ ಅವಾಂತರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಜನ ಪರದಾಡುತ್ತಿದ್ದಾರೆ. ಇದಕ್ಕೆಲ್ಲ ಈ ಸರ್ಕಾರ ನಿರ್ಲಕ್ಷ್ಯ ಧೋರಣೆಯೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರು ಮಳೆ ಅವಾಂತರ ವಿಷಯದಲ್ಲಿ ರಾಜ್ಯ ಸರ್ಕಾರ ಯಡವುತ್ತಿದೆ ಎಂದು ಟೀಕಿಸಿದ್ದಾರೆ.
ಬೆಂಗಳೂರು ಮಳೆಯ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ಒಂದೇ ದಿನದ ವರುಣನ ಅಬ್ಬರಕ್ಕೆ ಭಾರತದ ಸಿಲಿಕಾನ್ ವ್ಯಾಲಿಯ ಮೂಲಸೌಕರ್ಯ ವ್ಯವಸ್ಥೆ ತತ್ತರಿಸಿ ಹೋಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ಅಸಮರ್ಪಕ ನಿರ್ವಹಣೆಗೆ ಇದು ಉದಾಹರಣೆ. ಭಾರತದ ಐಟಿ ಕಾರಿಡಾರ್‌ನಲ್ಲಿ ಪ್ರವಾಹಸದೃಶ ಪರಿಸ್ಥಿತಿ ತಲೆದೋರಿದೆ ಎಂದು ದೂರಿದ್ದಾರೆ.
ಬೆಂಗಳೂರಿನಲ್ಲಿ ಒಳಚರಂಡಿ ವ್ಯವಸ್ಥೆ ಹದಗೆಟ್ಟು ರಸ್ತೆಗಳು ನದಿಗಳಾಗಿವೆ. ಸರ್ಕಾರದ ಘೋರ ವೈಫಲ್ಯದಿಂದ ಬೆಂಗಳೂರಿನ ಜನರು ಮಳೆಗೆ ಸಿಕ್ಕಿ ನರಕಯಾತನೆ ಅನುಭವಿಸುತ್ತಿದ್ದಾರೆ. ಆಡಳಿತ ವ್ಯವಸ್ಥೆಯ ಕೆಟ್ಟ ನೀತಿಗಳಿಂದಾಗಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರವನ್ನು ಹಾಳುಗೆಡವಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೇ ಬೆಂಗಳೂರು ಹೂಡಿಕೆದಾರ ಸ್ವರ್ಗವಾಗಿತ್ತು. ಜಾಗತಿಕ ಮಟ್ಟದ ತಂತ್ರಜ್ಞಾನದ ನೆಚ್ಚಿನ ನೆಲೆವೀಡಾಗಿದ್ದ ಬೆಂಗಳೂರು ಈಗ ಇನ್ನಿಲ್ಲದ ದುಸ್ಥಿತಿಗೆ ಸಿಲುಕಿ ಕಣ್ಣೀರು ಹಾಕುತ್ತಿದೆ ಎಂದೂ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗುತ್ತಿದ್ದು, ಈ ಬಗ್ಗೆ ಜೆಡಿಎಸ್‌ನೊಂದಿಗೆ ಬಿಜೆಪಿ ಸಹ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಒಂದೇ ಮಳೆಗೆ ಅವಾಂತರಗಳು ಸೃಷ್ಟಿಯಾಗಿದೆ. ಅಲ್ಲಲ್ಲಿ ರಸ್ತೆಗುಂಡಿಗಳು ಸೃಷ್ಟಿಯಾಗಿದ್ದು, ಜನ ಹಾಗೂ ವಾಹನ ಸವಾರರು ಪರದಾಡುತ್ತಿದ್ದಾರೆ ಎಂದು ಬಿಜೆಪಿ ದೂರಿದೆ.
ಬೆಂಗಳೂರು ಮಳೆ ಸಂಕಷ್ಟದ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸೋಷಿಯಲ್ ಮೀಡಿಯಾದಲ್ಲಿ ಸರಣಿ ಟ್ವೀಟ್ ಮಾಡುತ್ತಿವೆ. ಬೆಂಗಳೂರಲ್ಲಿ ಮಳೆಯಿಂದ ನೀರು ನಿಂತು ಸರ್ಜಾಪುರ ಹಾಗೂ ಮಾನ್ಯತಾ ಟೆಕ್ ಪಾರ್ಕ್ ರಸ್ತೆಗಳು ಕೆರೆಯಂತೆ ಬದಲಾಗಿವೆ. ಬೆಂಗಳೂರಿನ ಮಳೆ ಅವಾಂತರ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುವ ವಿರೋಧ ಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿವೆ.